ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಏಳು ಜನರಿಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿ ಡಿಸೆಂಬರ್‌ 9ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠವು ಇಂದು, ಶುಕ್ರವಾರ ಪ್ರಕಟಿಸಿದೆ. ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ, ಆರ್‌ ನಾಗರಾಜು, ಎಂ ಲಕ್ಷ್ಮಣ, ಅನುಕುಮಾರ ಅಲಿಯಾಸ್‌ ಅನು, ಜಗದೀಶ ಅಲಿಯಾಸ್‌ ಜಗ್ಗ, ಪ್ರದೋಷ ರಾವ್‌ ಅವರಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಘಟನೆ ನಡೆದ 6 ತಿಂಗಳ ಬಳಿಕ ದರ್ಶನಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ ಬೆನ್ನುನೋವು ಇದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಜೂನ್‌ 11ರಂದು ದರ್ಶನ್‌ ಮತ್ತಿತರರನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಜೂನ್‌ 22ರಿಂದ ದರ್ಶನ್‌ ಹಾಗೂ ಇತರೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್‌ಗೆ ಅಕ್ಟೋಬರ್‌ 30ರಂದು ಹೈಕೋರ್ಟ್‌ ವೈದ್ಯಕೀಯ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಅಂದಿನಿಂದ ಅವರು ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಬೆನ್ನುಹುರಿ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.