ಬೆಳಗಾವಿ : 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಮ್ಮ ಮನದ ಇಂಗಿತವನ್ನು ಮತ್ತೊಮ್ಮೆ ಬಿಚ್ಚಿಟ್ಟಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ. ಈ ಚುನಾವಣೆಯು ಇತರರನ್ನು ಆಯ್ಕೆ ಮಾಡುವ ನಾಯಕನಾಗಿ ನನ್ನನ್ನು ಬಲಪಡಿಸಿದೆ. ಬಿಜೆಪಿ ಹಿಡಿತದಲ್ಲಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಿದ್ದೇವೆ. ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರು 5 ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆ ವಿಷಯ ನನಗೆ ಗೊತ್ತಿಲ್ಲ ಎಂದು ಅವರು ಎಂದು ಅವರು ಸ್ಪಷ್ಟಪಡಿಸಿದರು.

ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ಸೋಲು ಅನುಭವಿಸಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಮಹಾರಾಷ್ಟ್ರದಲ್ಲಿ ನಮ್ಮ ಸೋಲಿಗೆ ವಿದ್ಯುನ್ಮಾನ ಮತಯಂತ್ರಗಳೇ ಕಾರಣ. ಇವಿಎಂ ಗಳ ಬಗ್ಗೆ ಸಾಕಷ್ಟು ಅನುಮಾನವಿದೆ. ಎಲ್ಲಿಯವರೆಗೆ ಅವು ಇರುತ್ತವೆಯೋ ಅಲ್ಲಿಯವರೆಗೆ ದೇಶದಲ್ಲಿ ಇದೇ ಪರಿಸ್ಥಿತಿ ಇರುತ್ತದೆ ಎಂದು ಅವರು ಹೇಳಿದರು.