ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಪಿಯುಸಿ ವರೆಗಿನ ಶಾಲಾ-ಕಾಲೇಜುಗಳಿಗೆ ಜುಲೈ 20 ರ (ಶನಿವಾರ) ರಜೆ ಘೋಷಣೆ ಮಾಡಲಾಗಿದೆ. ಶನಿವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ, ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶನಿವಾರವೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ:
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶನಿವಾರ (ಜುಲೈ 20ರಂದು) ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ :
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಶನಿವಾರ (ಜುಲೈ 20) ರಜೆ ಘೋಷಿಸಲಾಗಿದೆ.
ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ, ಹಳಿಯಾಳ, ಮುಂಡಗೋಡ ಹಾಗೂ ಜೋಯಿಡಾ ತಾಲೂಕಿನ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಶುಕ್ರವಾರ (ಜುಲೈ 20) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಮಾಹಿತಿ ನೀಡಿದ್ದಾರೆ