ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶುಕ್ರವಾರ ನಡೆದ ಆಶಾ ಕಾರ್ಯಕರ್ತೆಯರ ಮಾತುಕತೆ ಫಲಪ್ರದವಾಗಿದೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವ ಧನವನ್ನು ಏಪ್ರಿಲ್ 1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.
ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ.ಗಳು ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲು ಸರ್ಕಾರ ನಿರ್ಧರಿಸಿದೆ.
ಆಶಾ ಕಾರ್ಯಕರ್ತರಿಗೆ ಪ್ರತಿ ತಿಂಗಳು 10 ಸಾವಿರ ರೂ ನೀಡಲು ನಿರ್ಧರಿಸಿದ್ದೇವೆ. ಇದರಿಂದಾಗಿ ಆಶಾ ಕಾರ್ಯಕರ್ತರು ಮುಷ್ಕರ ಕೈಬಿಡಲು ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಶಾ ಕಾರ್ಯಕರ್ತರ ಜೊತೆ ಸಭೆ ನಡೆಸಲಾಗಿದೆ. ಈ ಮುಂಚೆ ಮಾಹೆಯಾನ 8000 ರೂ. ಗಳನ್ನು ನೀಡಲಾಗುತ್ತಿತ್ತು, ಈಗ ಪ್ರೋತ್ಸಾಹಕಗಳಳು (ಇನ್ಸೆಂಟಿವ್ಸ್) ಸೇರಿದಂತೆ ಪ್ರತಿ ತಿಂಗಳು 10,000 ರೂ. ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ಮುಷ್ಕರ ಕೈಬಿಡಲು ಆಶಾ ಕಾರ್ಯಕರ್ತರು ಸಮ್ಮತಿಸಿದ್ದಾರೆ ಎಂದು ತಿಳಿಸಿದರು.
ನಕ್ಸಲಿಸಂ ಅನ್ನು ಸಂಪೂರ್ಣ ತೊಡೆದು ಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟ ಶಾಂತಿಯುತವಾಗಿರಬೇಕು. ಅದು ಹಿಂಸಾತ್ಮಕ ದಾರಿ ಹಿಡಿಯಬಾರದು ಎಂಬುದು ನಮ್ಮ ಸರ್ಕಾರದ ನಿಲುವು. ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಕಾನೂನು ಕೈಗೆ ತೆಗೆದುಕೊಳ್ಳುವ ಅವಕಾಶವನ್ನು ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರಲಿ ಎಂದು ಆಶಿಸಿದರು.