
ಬೆಂಗಳೂರು : ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಆರಂಭವಾಗಲಿದ್ದು, ೨,೮೧೮ ಕೇಂದ್ರಗಳಲ್ಲಿ ೮.೯೬ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ ಮಾರ್ಚ್ ೨೧ ರಿಂದ ಏಪ್ರಿಲ್ ೪ರ ವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದ ೪.೬೧ ಲಕ್ಷ ಬಾಲಕರು, ೪.೩೪ ಲಕ್ಷ ಬಾಲಕಿಯರು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.
ಮೊದಲ ದಿನವಾದ ನಾಳೆ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಪರೀಕ್ಷೆಗಳು ಬೆಳಿಗ್ಗೆ ೧೦ರಿಂದ ೧:೧೫ರವರೆಗೆ ನಡೆಯಲಿವೆ.
ಮಾರ್ಚ್ ೨೪-ಗಣಿತ, ೨೬-ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ, ೨೯-ಸಮಾಜ ವಿಜ್ಞಾನ, ಏಪ್ರಿಲ್ ೧-ಅರ್ಥಶಾಸ್ತ್ರ, ಎಂಜಿನಿಯರಿಂಗ್ ವಿಷಯಗಳು, ೨-ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, ೪-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್‌ಎಸ್‌ಕ್ಯೂಎಫ್ ವಿಷಯಗಳು.
ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಓಆರ್‌ಎಸ್, ಪ್ರಥಮ ಚಿಕಿತ್ಸೆ ಕಿಟ್ ಇರಿಸಿಕೊಳ್ಳಲು ಸೂಚಿಸಲಾಗಿದೆ.
ಕಳೆದ ವರ್ಷದಿಂದ ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ವೆಬ್ ಕಾಸ್ಟಿಂಗ್ ನಲ್ಲಿ ೩ ಹಂತದಲ್ಲಿ ವೀಕ್ಷಣೆ ಮಾಡಲಾಗುತ್ತದೆ. ಈ ಬಾರಿ ಕೃತಕ ತಂತ್ರಜ್ಞಾನ ಬಳಸಿ ಫೇಸ್ ಡಿಟೆಕ್ಷನ್ ಮಾಡಲಾಗುತ್ತಿದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಕೊಠಡಿಯಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು.
ಪರೀಕ್ಷಾ ಕೇಂದ್ರದೊಳಗೆ ಈ ನಿಯಮ ಪಾಲಿಸಬೇಕು…
ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದಕ್ಕೆ ನಿಷೇಧ
ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಸಂಪೂರ್ಣವಾಗಿ ನಿಷೇಧ
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಇತ್ಯಾದಿ ನಿಷೇಧ
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.
ಸಿಸಿ ಕ್ಯಾಮೆರಾ ಕಡ್ಡಾಯ..
ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುತ್ತದೆ. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಈ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಉಚಿತ ಬಸ್ ಪಾಸ್
ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.