ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಿಂದ ಬಂದ್ ಆಗಿದ್ದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇ 29ರ ಬುಧವಾರದಿಂದ ಮತ್ತೆ ಬಾಗಿಲು ತೆರೆಯಲಿವೆ. ಆದರೆ, ಮಕ್ಕಳನ್ನು ಮಾತ್ರ ಮೇ 31ರಂದು ಶಾಲಾ ಪ್ರಾರಂಭೋತ್ಸವದ ಮೂಲಕ ಸಿಹಿ ನೀಡಿ ಶಿಕ್ಷಕರು ಬರ ಮಾಡಿಕೊಳ್ಳಲಿದ್ದಾರೆ.

ವಿಶೇಷವೆಂದರೆ ಈ ಬಾರಿ ಮಕ್ಕಳು ಶಾಲೆಗೆ ಬರುತ್ತಿದ್ದಂತೆ ಎರಡು ಜೊತೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ನೀಡಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಪ್ರತೀ ಬಾರಿಯಂತೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ತಡಗೊಳಿಸದೆ ಸಮಯಕ್ಕೆ ವಿತರಿಸುವ ಪ್ರಯತ್ನ ನಡೆಸಿದೆ.

ಈಗಾಗಲೇ ಸಮವಸ್ತ್ರ ಪೂರ್ಣ ಪ್ರಮಾಣದಲ್ಲಿ ತಾಲ್ಲೂಕು ಮಟ್ಟಕ್ಕೆ ರವಾನೆಯಾಗಿದ್ದು,
ಪಠ್ಯಪುಸ್ತಕಗಳನ್ನು ಶೇ.75ರಿಂದ 80ರಷ್ಟು ಸರಬರಾಜು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಉಳಿದ ಪಠ್ಯಪುಸ್ತಕಗಳ ಪೂರೈಕೆ ಮಾಡಲಾಗುವುದು. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐಗಳು ಶಾಲೆಗಳಿಗೆ ಅವುಗಳನ್ನು ತಲುಪಿಸಿ ಪ್ರಾರಂಭೋತ್ಸವದ ದಿನವೇ ವಿತರಣೆಗೆ ಕ್ರಮ ವಹಿಸಬೇಕೆಂದು ಇಲಾಖಾ ತಿಳಿಸಿದ್ದಾರೆ.

ಶಾಲಾ ಪ್ರಾರಂಭೋತ್ಸವ ದೊಂದಿಗೆ ಮೊದಲ ದಿನ ವಿದ್ಯಾರ್ಥಿಗಳನ್ನು ಬರಮಾಡಿ ಕೊಳ್ಳಲು ಬುಧವಾರ ಮತ್ತು ಗುರುವಾರ ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಂಪೌಂಡ್ ಸೇರಿದಂತೆ ಇಡೀ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯಶಿಕ್ಷಕರುಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.