ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿ ನಡೆದಿದೆ.ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತಿಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ನೀಲಪ್ಪ ಮೂಲಿಮನಿ (23), ಸುದೀಪ ಕೋಟಿ (18), ಶಿವನಗೌಡ ಯಲ್ಲನಗೌಡ್ರ (20), ಕಲ್ಮೇಶ ಮಾನೋಜಿ (26) ಎಂದು ಗುರುತಿಸಲಾಗಿದೆ. ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದವರು.7 ಯುವಕರು ಸ್ವಿಫ್ಟ್ ಕಾರಿನಲ್ಲಿ ಬೇವಿನಹಳ್ಳಿ ಗ್ರಾಮದಿಂದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಶಿಗ್ಗಾಂವಿ ಬಳಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳದಲ್ಲೇ ನೀಲಪ್ಪ ಹಾಗೂ ಸುದೀಪ ಕೋಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.