ಬೆಳಗಾವಿ : ಇಲ್ಲಿಯೇ ವಾಸಿಸಲು ಅನುಕೂಲವಾಗುವಂತೆ ಸೈಟ್ ನೋಡಿರುವೆ, ಆದಷ್ಟು ಬೇಗನೆ ಸೈಟ್ ಖರೀದಿ ಮಾಡಿ ಮನೆ ಕಟ್ಟುವ ಕೆಲಸ ಆರಂಭಿಸುವುದಾಗಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು,ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಜನರ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಬಾಕಿ ಉಳಿದ ಕೆಲಸಗಳನ್ನು ಮುಂದಿನ ದಿನಗಳಲ್ಲಿ ಮಾಡುವುದಾಗಿ ಅವರು ತಿಳಿಸಿದರು.

ಜನರಿಗೆ ಲಭ್ಯವಾಗುವ ನಿಟ್ಟಿನಲ್ಲಿ ವಾರದಲ್ಲಿ ಮೂರು-ನಾಲ್ಕು ದಿನ ಬೆಳಗಾವಿಯಲ್ಲೇ ಇರುತ್ತೇನೆ. ಜೊತೆಗೆ ಪ್ರತಿ ತಾಲೂಕಿಗೆ ಭೇಟಿ ನೀಡಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ವೇಳೆ ಬೆಳಗಾವಿಯ ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅವರು ಇತ್ತೀಚಿಗೆ ಮನೆ ಖಾಲಿ ಮಾಡಿದ್ದರು. ಈ ಬಗ್ಗೆ ಆ ಮನೆಯ ವಾಸ್ತು ಸರಿ ಇರಲಿಲ್ಲವಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದ ಅವರು, ಎಲ್ಲವೂ ಸರಿ ಇದೆ ಎಂದು ಪ್ರತಿಕ್ರಿಯಿಸಿದರು.

ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದ ವೇಳೆ ಆ ಪಕ್ಷದ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರ ತಾಯಿ ಹಾಗೂ ರಾಜ್ಯದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಗದೀಶ ಶೆಟ್ಟರ್ ಅವರು ತಮ್ಮ ಬೆಳಗಾವಿ ಅಡ್ರೆಸ್ ಹೇಳಲಿ ಎಂದು ಸವಾಲು ಹಾಕಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು.