ಬೆಳಗಾವಿ :
ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯನ್ನು ವಿಭಜಿಸಿ ಹೊಸ ಜಿಲ್ಲೆ ರಚನೆ ಮಾಡಬೇಕು ಎಂಬ ಬೇಡಿಕೆ ಇಂದು ನಿನ್ನೆದಲ್ಲ. ದಶಕಗಳಿಂದಲೂ ಈ ಬಗ್ಗೆ ಹೋರಾಟಗಾರರು ಹಾಗೂ ಜನ ಸರಕಾರವನ್ನು ಒತ್ತಾಯಿಸುತ್ತಲೇ ಇದ್ದಾರೆ.

ಅಥಣಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಂದು ಅಥಣಿಯಲ್ಲಿ ನಡೆದ ಅಥಣಿ ಜಿಲ್ಲಾ ಹೋರಾಟ ಕುರಿತ ಸಭೆಯಲ್ಲಿ ಅಥಣಿಯನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕು, ಈ ಬಗ್ಗೆ ಸದನದಲ್ಲಿ ಮಾತನಾಡುವುದಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸುವುದಾಗಿ ಹೋರಾಟಗಾರರಿಗೆ ಭರವಸೆ ನೀಡಿದ್ದರು. ಈ ನಡುವೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿ ಬೆಳಗಾವಿ ಜಿಲ್ಲಾ ವಿಭಜನೆ ಕುರಿತು ಸಹಮತ ಸೂಚಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ವಿಭಜನೆಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಬಂದಲ್ಲಿ ಅದನ್ನು ಖಂಡಿತವಾಗಿಯೂ ಸರ್ಕಾರ ಸಕಾರಾತ್ಮಕವಾಗಿ ತೆಗೆದುಕೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿ,
ಬೆಳಗಾವಿ ಜಿಲ್ಲಾ ವಿಭಜನೆ ಕುರಿತು ಆಗಾಗ ಚರ್ಚೆಯಾಗುತ್ತಿದೆ. ಈ ಬಗ್ಗೆ ಸದನದಲ್ಲಿ ಚರ್ಚಿಸೋಣ ಎಂದರು.

ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿ ಎಲ್ಲವೂ ಸಮಗ್ರ ಕರ್ನಾಟಕದಲ್ಲಿದೆ. ಈ ಭಾಗದ ಶಾಸಕರು ಉತ್ತರ ಕರ್ನಾಟಕ ವಿಷಯಗಳನ್ನು ಚರ್ಚೆಗೆ ಎತ್ತಿಕೊಂಡರೆ ಸರಕಾರ ಅದಕ್ಕೆ ಸ್ಪಂದಿಸಲಿದೆ ಎಂದು ಅವರು ತಿಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ಇರುವ ವೀರ ಸಾವರ್ಕರ್ ಅವರ ಭಾವಚಿತ್ರ ತೆಗೆಯುವ ಕುರಿತ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಗೆ ಉತ್ತರಿಸಲು ನಿರಾಕರಿಸಿದ ಅವರು, ಆ ಬಗ್ಗೆ ಅವರ ಹತ್ತಿರವೇ ಮಾತನಾಡಿ. ಭಾವಚಿತ್ರ ಹಾಕುವುದು ಬಿಡುವುದು ಸಭಾಧ್ಯಕ್ಷರ ವಿವೇಚನೆಗೆ ಬಿಟ್ಟ ವಿಚಾರ ಎಂದು ತಿಳಿಸಿದರು.