ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಕೋರಿ ಆಕೆಯ ತಂದೆ ಸಲ್ಲಿಸಿದ್ದ ಅರ್ಜಿ ಮತ್ತು ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾ ಮಾಡಿದೆ.
ಸೌಜನ್ಯ ತಂದೆ ಚಂದಪ್ಪ ಗೌಡ ಮತ್ತು ಖುಲಾಸೆಗೊಂಡಿರುವ ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಸಂತೋಷ ರಾವ್‌ ಸಲ್ಲಿಸಿದ್ದ ರಿಟ್‌ ಅರ್ಜಿಗಳು ಹಾಗೂ ಸಿಬಿಐ ಪ್ರತ್ಯೇಕವಾಗಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ ಹರೀಶಕುಮಾರ ಮತ್ತು ಜೆ ಎಂ ಖಾಜಿ ಅವರ ವಿಭಾಗೀಯ ಪೀಠ ವಜಾ ಮಾಡಿದೆ.

ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ‌ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣಾಧೀನ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುವ ಸಂತೋಷ ರಾವ್‌ ಅವರು ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಸೌಜನ್ಯ ತಂದೆ ಚಂದಪ್ಪ ಗೌಡ ಅವರು ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ದಳ ರಚಿಸಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಕೋರಿದ್ದರು. ಈ ಮೂರೂ ಅರ್ಜಿಗಳನ್ನು ನ್ಯಾಯಾಲಯ ವಜಾ ಮಾಡಿದೆ.

ಪ್ರಕರಣದ ಹಿನ್ನೆಲೆ
2012ರ ಅಕ್ಟೋಬರ್‌ 9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ ರಾವ್‌ ಅವರನ್ನು ಬಂಧಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ ರಾವ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ ರಾವ್‌ ಅವರನ್ನು ಖುಲಾಸೆಗೊಳಿಸಿ 2023ರ ಜೂನ್‌ 16ರಂದು ಆದೇಶಿಸಿತ್ತು. ಆ ಆದೇಶದಲ್ಲಿ ಪ್ರಾಸಿಕ್ಯೂಷನ್‌ (ತನಿಖಾಧಿಕಾರಿಗಳು) ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರ ಇರುವುದನ್ನು ಮತ್ತು ಆತನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ. ಗೋಲ್ಡನ್‌ ಅವರ್‌ನಲ್ಲಿ ತನಿಖೆಯನ್ನು (ಪ್ರಕರಣ ಘಟಿಸಿದ ಅಲ್ಪ ಅವಧಿಯಲ್ಲಿಯೇ ನಡೆಸುವ ಮಾಹಿತಿ, ಸಾಕ್ಷ್ಯ ಸಂಗ್ರಹ) ಸಮರ್ಪಕವಾಗಿ ಮಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು.