ಬೆಂಗಳೂರು : ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಎರಡ್ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಂದು ವಾರದ ಹಿಂದಷ್ಟೇ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು, ಅದಾದ ಬಳಿಕ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ರಾಜ್ಯದ ಕರಾವಳಿ ಜಿಲ್ಲೆಗಳು, ವಿಶೇಷವಾಗಿ ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಮಾರ್ಚ್ 25ರಿಂದ ಉತ್ತಮ ಮಳೆಯ ಸಾಧ್ಯತೆ ಇದೆ.

ಮುಂದಿನ ಐದು ದಿನಗಳಲ್ಲಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಮತ್ತು ನಾಳೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ಬಿಸಿಲು ಹೆಚ್ಚಾಗಿ ಇರಲಿದೆ ಎಂದು ತಿಳಿಸಿದೆ.