ದೆಹಲಿ :
ಬಿಜೆಪಿ ಲೋಕಸಭಾ ಚುನಾವಣೆಗೆ 195 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದೆ.
ಇದರಲ್ಲಿ ಉತ್ತರ ಭಾರತದ ರಾಜ್ಯಗಳ ಹೆಚ್ಚಿನ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಆದರೆ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ದಕ್ಷಿಣ ಭಾರತದಲ್ಲಿ ಕರ್ನಾಟಕ ಮತ್ತು ತೆಲಂಗಾಣ ಹೊರತುಪಡಿಸಿ ಇತರ ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಲ ಹೊಂದಿಲ್ಲ. ಹೀಗಾಗಿ ಸ್ಥಳೀಯ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು 28 ಸ್ಥಾನಗಳ ಪೈಕಿ 3 ಸ್ಥಾನಗಳಲ್ಲಿ ಅಂದರೆ ಮಂಡ್ಯ, ಕೋಲಾರ ಮತ್ತು ಹಾಸನಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಬಹುದು.
ನೆರೆಯ ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಅಜಿತ ಪವಾರ್ ನೇತೃತ್ವದ ಎನ್ ಸಿಪಿ, ತಮಿಳುನಾಡಿನಲ್ಲಿ ಟಿಎಂಸಿ ಮತ್ತು ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ, ಜನ ಸೇನಾ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. ಹೀಗಾಗಿ ಆ ಪಕ್ಷಗಳ ನಾಯಕರ ಜೊತೆ ಚರ್ಚಿಸಿ ಹೆಸರು ಘೋಷಣೆ ಮಾಡಬೇಕಾಗಿದೆ. ಈ ಹಿನ್ನಲೆಯಲ್ಲಿ ಸಂಸದರು ಮತ್ತು ಕೆಲ ಕ್ಷೇತ್ರಗಳಲ್ಲಿ ಅಚ್ಚರಿಯ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಸದ್ಯಕ್ಕೆ ಘೋಷಣೆ ಮಾಡಿದೆ. ಮುಂದಿನ ದಿನಗಳಲ್ಲಿ ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕ ಮತ್ತು ದೇಶದ ಇತರ ಪ್ರಮುಖ ರಾಜ್ಯಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.