ಉಡುಪಿ/ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಆಯ್ಕೆಯಾಗಿರುವುದರಿಂದ ಅವರಿಂದ ತೆರವಾಗಿರುವ ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಗೆ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಚಿವರ ನಡುವೆ ತೀವ್ರ ಪೈಪೋಟಿ ಗಮನ ಸೆಳೆದಿದೆ.

ಮೂವರು ನಾಯಕರು ಈಗ ತಾವೇ ಟಿಕೆಟ್ ಪಡೆಯಬೇಕು ಎಂಬ ಪ್ರಯತ್ನ ನಡೆಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಲ್ಲಿ ಸೋಲು ಅನುಭವಿಸಿರುವ ಕೆ. ಜಯಪ್ರಕಾಶ ಹೆಗ್ಡೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಮತ್ತು ಮಾಜಿ ಸಚಿವ ರಮಾನಾಥ ರೈ ಟಿಕೆಟ್ ಬೇಡಿಕೆ ಇಟ್ಟಿದ್ದು ಮೂವರಲ್ಲಿ ಒಬ್ಬರಿಗೆ ಟಿಕೆಟ್ ಸಿಗಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ, ಜಿ.ಸಿ.ಚಂದ್ರಶೇಖರ ನೇತೃತ್ವದಲ್ಲಿ ಕೆಪಿಸಿಸಿ ಶಿಫಾರಸು ಮಾಡುವ ಹೆಸರನ್ನು ಪರಿಶೀಲಿಸಿ ಪಕ್ಷದ ವರಿಷ್ಠರು ಅಂತಿಮಗೊಳಿಸಲಿದ್ದಾರೆ. ಒಟ್ಟಾರೆ ಇದೀಗ ಕರಾವಳಿಯ ಈ ಮೂರು ನಾಯಕರಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ ಕಾದು ನೋಡಬೇಕಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಈ ಕ್ಷೇತ್ರದಲ್ಲಿ ಸದ್ಯ ಬಿಜೆಪಿ ಪ್ರಾಬಲ್ಯ ಹೊಂದಿದೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಕರಾವಳಿಯ ಈ ಪ್ರತಿಷ್ಠಿತ ಕ್ಷೇತ್ರವನ್ನು ಗೆಲ್ಲಲೇಬೇಕು ಎಂದು ಪಣತೊಟ್ಟಿದೆ.