ಹುಬ್ಬಳ್ಳಿ: ಹುಬ್ಬಳ್ಳಿಯ ಅಂಚಟಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ನಾಲ್ವರು ಕಾರಿನಲ್ಲಿದ್ದರು ಎಂದು ತಿಳಿದು ಬಂದಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಒಬ್ಬ ಗಾಯಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮೃತರ ಗುರುತುಗಳು ಪತ್ತೆಯಾಗಿಲ್ಲ, ಪೊಲೀಸರು ಈ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.