ಬೆಂಗಳೂರು: ಕೊನೆಗೂ ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶ ಮಾಡಿದಂತಿದೆ. ರಾಜ್ಯದ ವಿವಿಧೆಡೆ ಗುರುವಾರದಿಂದ ಏಳು ದಿನಗಳು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಎಲ್ಲ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬಹುತೇಕ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಮುಂದಿನ ಎರಡು ದಿನ ಕೆಲ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗುರುವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಸೇರಿ ಹತ್ತಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದಿನ ಏಳು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.