ಬೆಳಗಾವಿ: ರೈತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆಸಿದ ಆರೋಪದ ಮೇರೆಗೆ ತೋಟಗಾರಿಕೆ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ತೋಟಗಾರಿಕೆ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ರಾಯಬಾಗ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ಕರೆಪ್ಪಗೊಳ ಮತ್ತು ಅರಭಾವಿಯ ಸಹಾಯಕ ತೋಟಗಾರಿಕಾ ಅಧಿಕಾರಿ ಶಿವಾನಂದ ಸವಸುದ್ದಿ ಅಮಾನತುಗೊಂಡಿದ್ದಾರೆ. ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಮಂಜೂರಾದ ಯೋಜನೆಯ 19.28 ಲಕ್ಷ ರೂ. ಹಣವನ್ನು ನಕಲಿ ದಾಖಲೆ ಸೃಷ್ಟಿಸುವ ಮೂಲಕ ಅಧಿಕಾರಿಗಳು ಅವ್ಯವಹಾರ ನಡೆಸಿದ ಆರೋಪ ಹೊಂದಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 2019ರಲ್ಲಿ ತೋಟಗಾರಿಕಾ ಇಲಾಖೆಯಿಂದ 19.28 ಲಕ್ಷ ರೂಪಾಯಿ ವೆಚ್ಚದ ಯೋಜನೆ ಜಾರಿ ಮಾಡಲಾಗಿತ್ತು. ಆದರೆ, ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಮೂರು ಜನ ರೈತರಿಗೆ ಯೋಜನೆ ಹಣ ನೀಡದೆ ಫಲಾನುಭವಿ ರೈತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ವಂಚಿಸಿದ್ದರು. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಧಿಕಾರಿಗಳೇ ವಂಚನೆ ಮಾಡಿರುವುದಾಗಿ ವರದಿ ಮಾಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕಿರುವ ಹಿನ್ನೆಲೆಯಲ್ಲಿ ರೈತ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಕೊನೆಗೂ ಇಲಾಖೆ ಅಧಿಕಾರಿಗಳು ಇಬ್ಬರನ್ನು ಸಸ್ಪೆಂಡ್ ಮಾಡಿದ್ದಾರೆ.