ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.
ಇಂದಿನಿಂದಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ಬಿಜೆಪಿಯಿಂದ ಮಾಜಿ ಶಾಸಕ ಪ್ರಮೋದ ಮಧ್ವರಾಜ್ ಮತ್ತು ಸತೀಶ ಕುಂಪಲ ಸೇರಿದಂತೆ ಹಲವರ ಹೆಸರು ಪ್ರಚಾರದಲ್ಲಿದ್ದರೆ, ಕಾಂಗ್ರೆಸ್ ಈ ಕ್ಷೇತ್ರವನ್ನು ಈ ಬಾರಿ ಗೆಲ್ಲಲೇ ಬೇಕು ಎಂಬ ಪಣತೊಟ್ಟಿದೆ.
ಈ ಕ್ಷೇತ್ರದಿಂದ ಸತತವಾಗಿ ಗೆಲ್ಲುತ್ತಾ ಬಂದಿರುವ ಬಿಜೆಪಿಯ ಕೋಟ ಶ್ರೀನಿವಾಸ್ ಪೂಜಾರಿ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಈಗ ವಿಧಾನಪರಿಷತ್ ಚುನಾವಣೆ ನಡೆಯುತ್ತಿದೆ.
ಕೋಟ ಶ್ರೀನಿವಾಸ್ ಪೂಜಾರಿ ಅವರ ಅವಧಿ ಮೂರೂವರೆ ವರ್ಷ ಇತ್ತು, ಆದರೆ ಅವರು ಅಷ್ಟರಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು. ಹೀಗಾಗಿ ಸದ್ಯ 3 ವರ್ಷಗಳ ಅವಧಿಗೆ ಹೊಸ ವಿಧಾನ ಪರಿಷತ್ ಸದಸ್ಯರ ನೇಮಕವಾಗಬೇಕಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರು ಈ ಚುನಾವಣೆಯಲ್ಲಿ ಮತದಾನಕ್ಕೆ ಅರ್ಹರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡಿರುವ ಈ ವಿಧಾನಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಗೆಲ್ಲಲು ಬಿಜೆಪಿ ತಲೆ ಕೆಡಿಸಿಕೊಂಡಿಲ್ಲ. ಯಾಕೆಂದರೆ ಬಿಜೆಪಿ ಪ್ರಾಬಲ್ಯ ಇದೆ. ಆದರೆ ಕಾಂಗ್ರೆಸ್ ಈ ಬಾರಿ ರಾಜ್ಯದಲ್ಲಿ ಆಡಳಿತದಲ್ಲಿರುವುದರಿಂದ ಕೇಸರಿ ಪಡೆಯನ್ನು ಹಿಮ್ಮೆಟಿಸಬೇಕೆಂಬ ತವಕದಲ್ಲಿದೆ. ಕಳೆದ ಬಾರಿ 2021ರ ಡಿಸೆಂಬರ್ ನಲ್ಲಿ ಚುನಾವಣೆ ನಡೆದಿದ್ದು ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ, ಕಾಂಗ್ರೆಸ್ ನಿಂದ ಮಂಜುನಾಥ ಭಂಡಾರಿ ಆಯ್ಕೆಯಾಗಿದ್ದರು.
ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾಗಲಿರುವ ಈ ಕ್ಷೇತ್ರಕ್ಕೆ ಮಂಗಳೂರು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರ ಹೆಸರು ಸಹ ಬಿಜೆಪಿಯಲ್ಲಿ ಪ್ರಮುಖವಾಗಿ ಹರಿದಾಡುತ್ತಿದೆ.