ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಖಾನಾಪುರ ಮತಕ್ಷೇತ್ರವನ್ನು ಒಳಗೊಂಡಿರುವ ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಮತ್ತೆ ದಿಗ್ವಿಜಯ ಸಾಧಿಸಿದೆ.
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವರು ಹಾಗೂ ಮಾಜಿ ಸ್ಪೀಕರ್ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ನಿರಾಕರಿಸಿ ಕಾಗೇರಿ ಅವರಿಗೆ ಟಿಕೆಟ್ ದಯಪಾಲಿಸಿತ್ತು. ಈ ಪ್ರಯತ್ನದಲ್ಲಿ ಬಿಜೆಪಿ ಕೊನೆಗೂ ಯಶಸ್ಸು ಸಾಧಿಸಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಂಗ್ರೆಸ್ ಪಕ್ಷದವರಾಗಿರುವ ಬೆಳಗಾವಿ ಜಿಲ್ಲೆ ಖಾನಾಪುರದ ಕಾಂಗ್ರೆಸ್ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳಕರ್ ಅವರನ್ನು ಪರಾಭವಗೊಳಿಸುವ ಮೂಲಕ ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡುತ್ತಿದ್ದಾರೆ.

ಕಿತ್ತೂರಿನಲ್ಲಿ ಕಾಂಗ್ರೆಸ್ ಹಾಗೂ ಖಾನಾಪುರದಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಅವರ ಮತಗಳನ್ನು ಪಡೆಯುವಲ್ಲಿ ಅಂಜಲಿ ನಿಂಬಾಳ್ಕರ್ ಯಶಸ್ಸು ಪಡೆಯುವುದೇ ಇರುವುದು ಕಂಡು ಬಂದಿದೆ. ಒಟ್ಟಾರೆ, ಗಮನಿಸಿದರೆ ಈ ಬಾರಿ ಉತ್ತರ ಕನ್ನಡ ಮತಕ್ಷೇತ್ರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಬಹುದೊಡ್ಡ ಗೆಲುವು ಸಾಧಿಸಿರುವುದು ಬಿಜೆಪಿ ಪಾಳಯದಲ್ಲಿ ಹೊಸ ಹುಮ್ಮಸ್ಸಿಗೆ ಕಾರಣವಾಗಿದೆ.