ಉಡುಪಿ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರ್ಚ್ 21ರಿಂದ 24ರ ನಡುವೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿದೆ. ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿದಿದೆ. ಪ್ರಸ್ತುತ ಕುಡಿಯುವ ನೀರಿನ ಹಾಹಾಕಾರ ಆರಂಭವಾಗಿಲ್ಲದಿದ್ದರೂ ಮುಂದಿನ ಎರಡು ತಿಂಗಳು ನೀರಿನ ತೀವ್ರ ಕೊರತೆ ಕಾಡಲಿದೆ. ಈ ನಡುವೆ ಉತ್ತಮ ಮಳೆ ಆದರೆ ನೀರಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ನಿವಾರಣೆಯಾಗಬಹುದು. ಈ ನಡುವೆ ಚಿಕ್ಕಮಗಳೂರು, ಕೊಡಗು ನಂತರ ಇದೀಗ ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 18 ರಿಂದ 26 ರ ನಡುವೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಮಾರ್ಚ್ 21ರಿಂದ 24ರ ನಡುವೆ ಉಡುಪಿ, ದಕ್ಷಿಣ ಕನ್ನಡ, ಮೈಸೂರು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.