ಬೆಳಗಾವಿ :
ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರವನ್ನು ಈ ಬಾರಿ ಗೆಲ್ಲಲೇ ಬೇಕು ಎಂದು ಈ ಸಲ ತೊಟ್ಟಿರುವ ಸಚಿವ ಸತೀಶ ಜಾರಕಿಹೊಳಿ ಇದೀಗ ಚುನಾವಣೆ ಕುರಿತು ಮಾತನಾಡಿದ್ದಾರೆ.

ನಾನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದು, ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆಲ ವಿಷಯಗಳ ಬಗ್ಗೆ ಮಾತನಾಡಿದರು.

ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಪಕ್ಷಕ್ಕೆ ಬಿಟ್ಟ ವಿಷಯ. ನಾವು ದೆಹಲಿಗೆ ಹೋಗಿ ಬಂದಿದ್ದೇವೆ. ಪಕ್ಷ ಹೆಚ್ಚು ಸ್ಥಾನ ಗೆಲ್ಲಲು ಎಲ್ಲರೂ ಸೇರಿ ಶ್ರಮಿಸುವುದಾಗಿ ಅವರು ಹೇಳಿದರು.

ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಕುರುಬ ಸಮಾಜದ ಸಮಾವೇಶದ ಭಾಷಣದಲ್ಲಿ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕುರುಬರಿಗೆ ಟಿಕೆಟ್ ನೀಡಲು ಚಿಂತನೆ ಮಾಡಿರುವುದಾಗಿ ಹೇಳಿದ್ದೇವೆಯೇ ಹೊರತು ಕೊಡುತ್ತೇವೆ ಎಂದು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧಿಸಲು ಈಗಾಗಲೇ ಇಬ್ಬರು ಅರ್ಜಿ ಸಲ್ಲಿಸಿದ್ದಾರೆ. ಕುರುಬ ಸಮುದಾಯದವರ ಜೊತೆ ಚರ್ಚಿಸಿ ಅಭಿಪ್ರಾಯ ಪಡೆದುಕೊಂಡು ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ನಾಳೆ ನಾನು ವಿಜಯಪುರಕ್ಕೆ ಹೊರಟಿರುವೆ. ವಿಜಯಪುರ, ಚಿಕ್ಕೋಡಿ, ಬೆಳಗಾವಿ ಲೋಕಸಭಾ ಮತಕ್ಷೇತ್ರದ ಪಟ್ಟಿ ಸಂಗ್ರಹಿಸಿ ಹೈಕಮಾಂಡಿಗೆ ಕಳುಹಿಸಲಾಗುವುದು. ಚುನಾವಣೆಗೆ ಸಾಕಷ್ಟು ಮೊದಲೇ ಅಭ್ಯರ್ಥಿಗಳಿಗೆ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ತಿಳಿಸಲಾಗಿದೆ ಎಂದು ಹೇಳಿದರು.