ಬೆಳಗಾವಿ: ಲೋಕಸಭಾ ಚುನಾವಣೆ ಎದುರಲ್ಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಮತ್ತೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಅವರು ಮತ್ತೆ ಬಿಜೆಪಿ ಸೇರಿದ್ದಾರೆ. ಹಿಂದೆ ಯಡಿಯೂರಪ್ಪ ಅವರ ಕೆಜೆಪಿಯಿಂದ ಆಯ್ಕೆಯಾಗಿದ್ದ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಇದೀಗ ಮರಳಿ ಬಿಜೆಪಿ ಸೇರ್ಪಡೆಗೊಂಡಿರುವುದು ಬಿಜೆಪಿ ಪಾಲಿಗೆ ಇನ್ನಷ್ಟು ಶಕ್ತಿ ತಂದುಕೊಟ್ಟಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಗದೀಶ ಮೆಟಗುಡ್ಡವರಿಗೆ ಬಿಜೆಪಿ ಟಿಕೆಟ್ ನೀಡಿದ್ದರಿಂದ ಬಂಡಾಯವೆದ್ದ ವಿಶ್ವನಾಥ ಪಾಟೀಲ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಇದರಿಂದ ಬಿಜೆಪಿ ಮತಗಳು ಒಡೆದು ನಿರಾಯಾಸವಾಗಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿಶ್ವನಾಥ ಪಾಟೀಲ ಮತ್ತೆ ಕಮಲ ಪಕ್ಷ ಸೇರ್ಪಡೆಯಾಗುತ್ತಿರುವುದು ಹಲವು ಲೆಕ್ಕಾಚಾರಗಳಿಗೆ ಕಾರಣವಾಗಿದೆ. ರಾಜ್ಯದ ಇತರ ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಆದರೆ ಬೆಳಗಾವಿಗೆ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ. ಈ ನಿಟ್ಟಿನಲ್ಲಿ ಯಡಿಯೂರಪ್ಪ ತಮ್ಮ ಆಪ್ತನಿಗೆ ಟಿಕೆಟ್ ನೀಡುತ್ತಾರೋ ಕಾದು ನೋಡಬೇಕಾಗಿದೆ.