ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಪರ ಪ್ರಚಾರ ಮಾಡಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ. 24ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ತಿಳಿಸಿದರು.
ಮಂಗಳವಾರ ಕಡಿಯಾಳಿಯ ಬಿಜೆಪಿ ಮಾಧ್ಯಮ ಕೇಂದ್ರದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಯೋಗಿ ಆದಿತ್ಯನಾಥ್ ಅಂತಿಮ ಹಂತದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ ಏ. 22ರಂದು ಉಡುಪಿ ಹಾಗೂ ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ರಾಘವೇಂದ್ರ ಅವರೂ ಉಡುಪಿಯಲ್ಲಿ ಪ್ರಚಾರ ಮಾಡುವ ಕಾರ್ಯಕ್ರಮವಿದ್ದು ಯುವ ಹಾಗೂ ಮಹಿಳಾ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರು ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಬಳಿಕ ಬಿಜೆಪಿ ಮತ ಪ್ರಮಾಣ ಶೇ 10ರಷ್ಟು ಏರಿಕೆಯಾಗುವ ವಿಶ್ವಾಸವಿದೆ. ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿರುವ ಮತದಾರರು ಪಕ್ಷದ ಪರ ಮತ ಹಾಕಲಿದ್ದಾರೆ. ಮೋದಿ ದೇಶವನ್ನು ಸಮರ್ಥವಾಗಿ ಮುನ್ನಡೆಸಲಿದ್ದಾರೆ ಎಂಬ ಅರಿವು ಮತದಾರರಿಗೆ ಇದೆ ಎಂದರು.